ತುಮಕೂರು : ತಾಲ್ಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಅಧಿಕಾರಿಗಳು ಸ್ವತಃ ಭೇಟಿ ನೀಡಿ, ತ್ವರಿತ ಗತಿಯಲ್ಲಿ ನೀರು ಪೂರೈಕೆಗೆ ಕ್ರಮವಹಿಸುವ ಮೂಲಕ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರಿಂದು ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಎಲ್ಲಾ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಮತ್ತು ಕುಡಿಯುವ ನೀರು, ಮೇವು ಪೂರೈಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ತಾಲ್ಲೂಕು ಟಾಸ್ಕ್ ಪೋರ್ಸ್ ಸಮಿತಿಯ ತೀರ್ಮಾನದಂತೆ ನಿಯಮಾನುಸಾರ ಅವಶ್ಯಕತೆಗನುಗುಣವಾಗಿ ಹೊಸ ಕೊಳವೆ ಬಾವಿಗಳನ್ನು ಕೊರೆಸಿ, ಅಂತರ್ಜಲ ಮೂಲವಿಲ್ಲದ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಸೂಚಿಸಿದರು.
ಕುಡಿಯುವ ನೀರು ಪೂರೈಕೆ ಕುರಿತು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯು ಕಾಲ ಕಾಲಕ್ಕೆ ಸಭೆ ನಡೆಸಿ ಕುಡಿಯುವ ನೀರಿನ ಪೂರೈಕೆಯ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡುವಂತೆ ಸೂಚಿಸಿದರು.
ಗ್ರಾಮ ಲೆಕ್ಕಿಗರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿನ ಕೊಳವೆ ಬಾವಿಗಳ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು. ಪಿಡಿಯೋಗಳ ಮೂಲಕವೂ ಸಹ ತಹಸೀಲ್ದಾರ್ ಮತ್ತು ಇಓಗಳು ಮಾಹಿತಿ ಪಡೆಯಬೇಕು, ಇದಕ್ಕೂ ಮುಂಚೆ ಸಮಸ್ಯಾತ್ಮಕ ಗ್ರಾಮಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಪೂರೈಸಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಪಡೆದು ನೀರು ಪೂರೈಸಬೇಕು. ಈ ಯಾವುದು ಪ್ರಯತ್ನಗಳು ಕೈಗೂಡದಿದ್ದಲ್ಲಿ ಮಾತ್ರ ಹೊಸ ಕೊಳವೆ ಬಾವಿಗೆ ಶಾಸಕರ ನೇತೃತ್ವದ ಟಾರ್ಸ್ಕಪೋರ್ಸ್ ಸಮಿತಿಗೆ ಪ್ರಸ್ತಾವನೆ ಸಲ್ಲಿಸಿ, ಅನುಮೋದನೆ ಪಡೆದು ಹೊಸ ಕೊಳವೆ ಬಾವಿಗಳ ಕೊರೆಸುವಿಕೆಗೆ ಮುಂದಾಗಬೇಕೆAದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಬರಪರಿಶೀಲನೆ ಮತ್ತು ಕುಡಿಯುವ ನೀರಿನ ಪೂರೈಕೆಗಾಗಿ ನೇಮಿಸಲಾಗಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಬೇಕು ಮತ್ತು ರೈತರೊಂದಿಗೆ ಮಾತನಾಡಬೇಕು. ಖಾಸಗಿ ಬೋರ್‌ವೆಲ್ ಹೊಂದಿರುವ ರೈತರನ್ನು ಸಂಪರ್ಕಿಸಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಕ್ಷೇತ್ರ ಭೇಟಿ ಮಾಡಬೇಕು. ಇಲ್ಲದಿದ್ದಲ್ಲಿ ಅಂತಹವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಮಾತನಾಡಿ, ಅತೀ ತುರ್ತು ಸಂದರ್ಭದಲ್ಲಿ ಹೆಚ್ಚು ಮನೆಗಳಿರುವ ಗ್ರಾಮಗಳಿಗೆ ಜೆ.ಜೆ.ಎಂ ಯೋಜನೆಯಲ್ಲಿ ಅವಕಾಶ ಇರುವುದರಿಂದ ಅನುಮೋದನೆ ಪಡೆದು ಪ್ರಸ್ತಾವನೆ ಸಲ್ಲಿಸಿ ಹೊಸ ಕೊಳವೆ ಬಾವಿಗಳನ್ನು ಕರೆಸಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಹಾಗೂ ಜಿಲ್ಲಾ ಮಟ್ಟದ ಬರ ನಿರ್ವಹಣೆ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.