ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

ತುಮಕೂರು : ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದಿಂದ ರೈತರು ಸೇರಿದಂತೆ ಯಾರೇ ಕರೆ ಮಾಡಿದರೂ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ತಕ್ಷಣವೇ ಕರೆ ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು ೧೯೧೨ ಹೆಲ್ಪ್‌ಲೈನ್‌ಗೆ ದಾಖಲಾಗುವ ದೂರವಾಣಿ ಕರೆಗಳು ಮತ್ತು ಕರೆಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ತಮಗೆ ಪ್ರತಿ ದಿನ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲಿಯೂ ಸಹ ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಮತ್ತು ತಕ್ಷಣವೇ ಪಂಪ್ ಮಾಡುವ ಮೂಲಕ ನೀರನ್ನು ಹೊರತೆಗೆಯಬೇಕು. ಮಳೆ ಅನಾಹುತದಿಂದ ಯಾವುದೇ ಅವಘಡವಾಗದಂತೆ ಎಲ್ಲಾ ನಿಟ್ಟಿನಲ್ಲೂ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಬೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

ಬುಗುಡನಹಳ್ಳಿ ಕೆರೆಯ ಸುತ್ತಮುತ್ತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕೆರೆಯ ಪಾತ್ರದ ರೈತರು ಯಾವುದೇ ಕಾರಣಕ್ಕೂ ಬುಗುಡನಹಳ್ಳಿ ಕೆರೆ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಬಾರದು. ಬಳಸಿದಲ್ಲಿ ದಂಡ ವಿಧಿಸಲಾಗುವುದು ಎಂದು ಸಾರ್ವಜನಿಕರಲ್ಲಿ ಎಚ್ಚರಿಕೆ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಹೊಸದಾಗಿ ಕೊರೆಯಲಾದ ೧೩೯ ಕೊಳವೆ ಬಾವಿಗಳ ಪೈಕಿ ೧೨೫ ಕೊಳವೆ ಬಾವಿಗಳಿಗೆ ಈಗಾಗಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇನ್ನುಳಿದ ೧೪ ಬೋರ್‌ವೆಲ್‌ಗಳಿಗೆ ತಕ್ಷಣವೇ ವಿದ್ಯುದ್ದೀಕರಣಗೊಳಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕುಣಿಗಲ್‌ನಲ್ಲಿ ಒಂದು ರಾಸು ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ ೨ ರಾಸುಗಳು ಮೃತಪಟ್ಟಿದ್ದು, ತ್ವರಿತಗತಿಯಲ್ಲಿ ಪರಿಹಾರ ಪಾವತಿಯಾಗಬೇಕು. ತಹಶೀಲ್ದಾರ್ ಮತ್ತು ಇಓಗಳು ಖುದ್ದಾಗಿ ಸಂತ್ರಸ್ತರ ಮನೆಗಳಿಗೆ ತೆರಳಿ ಚೆಕ್ ವಿತರಿಸಬೇಕು. ಅಂತೆಯೇ ಬೆಳೆ ಹಾನಿ ಬಗ್ಗೆ ವರದಿಯಾದಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ವರದಿ ನೀಡಬೇಕು. ನಿಯಮಾನುಸಾರ ಪರಿಹಾರಕ್ಕೆ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ನೀತಿ ಧೋರಣೆಯನ್ನು ಸಹಿಸುವುದಿಲ್ಲವೆಂದು ಎಚ್ಚರಿಕೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿರುವ ೭೦೦ ಕೊಳವೆ ಬಾವಿಗಳಲ್ಲಿ ಪ್ರಸ್ತುತ ನೀರಿನ ಇಳುವರಿ ಕುರಿತು ತಮಗೆ ಸಮಗ್ರ ವರದಿ ಸಲ್ಲಿಸಬೇಕು. ಪ್ರತಿಯೊಂದು ಕೊಳವೆ ಬಾವಿಗೆ ಆರ್‌ಆರ್ ಸಂಖ್ಯೆ ಲಿಂಕ್ ಆಗಿರುವಂತೆ ನೋಡಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದಂತೆ ಪಾಲಿಕೆ ಮತ್ತು ಬೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.

ಖಾಸಗಿ ಬೋರ್‌ವೆಲ್‌ಗಳ ರೈತರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಬಾಡಿಗೆಯನ್ನು ಪ್ರತಿ ತಿಂಗಳು ಪಾವತಿ ಮಾಡಬೇಕು. ವಿಳಂಬ ಧೋರಣೆ ಅನುಸರಿಸಬಾರದು. ಜಿಲ್ಲೆಯಾದ್ಯಂತ ಒಟ್ಟು ೮೫ ಖಾಸಗಿ ಕೊಳವೆಬಾವಿಗಳಿದ್ದು, ಈ ಖಾಸಗಿ ಕೊಳವೆ ಮಾಲೀಕರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಜಿಲ್ಲಾ ಪಂಚಾಯತಿಗೆ ಕಳುಹಿಸಿಕೊಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಅವರು ಇಓಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.